
ಬೆಂಗಳೂರು: ರಾಷ್ಟ್ರಹಿತ ಮತ್ತು ಗೋರಕ್ಷಣೆಯ ಪರ ಧ್ವನಿಯಾಗುವ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸುವುದು ಸರಿಯಲ್ಲ ಎಂದು ಮಾಜಿ ಸಚಿವ, ಬಿಜೆಪಿ ನಾಯಕ ಸಿ.ಟಿ. ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನು (DGP) ಪಕ್ಷದ ಪ್ರಮುಖ ನಾಯಕರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಭೇಟಿಯಾಗಿ ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ ಮತ್ತು ಅವರ ತಂಡದ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವಂತೆ ಮನವಿ ಸಲ್ಲಿಸಿದ್ದಾರೆ. ಅಕ್ರಮ ಬಾಂಗ್ಲಾದೇಶಿ ವಲಸಿಗರ ಪತ್ತೆ, ಅಕ್ರಮ ಗೋಹತ್ಯೆ ಹಾಗೂ ಗೋಸಾಗಾಟ ತಡೆಗಟ್ಟುವಂತಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿರುವ ಕಾರ್ಯಕರ್ತರನ್ನು ಅಪರಾಧಿಗಳಂತೆ ಕಾಣುವುದು ಖಂಡನೀಯ ಎಂದು ಹೇಳಿದ್ದಾರೆ. ಸುಳ್ಳು ಪ್ರಕರಣ ದಾಖಲಿಸಿ ತಿಂಗಳುಗಟ್ಟಲೆ ಜೈಲಿನಲ್ಲಿ ಇರಿಸುವುದು, ₹10 ಲಕ್ಷದವರೆಗೆ ಬಾಂಡ್ ಕಟ್ಟಿಸಿಕೊಳ್ಳುವಂತೆ ಮಾಡುವುದು ಹಾಗೂ ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ಸ್ಥಗಿತಗೊಳಿಸುವ ಮೂಲಕ ಸರ್ಕಾರ ದಮನಕಾರಿ ಕ್ರಮ ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ. ಪೊಲೀಸ್ ಇಲಾಖೆ ಅಪರಾಧಿಗಳು ಮತ್ತು ಸಾಮಾಜಿಕ ಕಾರ್ಯಕರ್ತರ ನಡುವಿನ ವ್ಯತ್ಯಾಸ ಅರಿತು ಸಂವಿಧಾನಬದ್ಧವಾಗಿ ಹಾಗೂ ನ್ಯಾಯಯುತವಾಗಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಸಂಘಟಿತ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್, ವಿಧಾನ ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್, ಮಂಜು ಸೇರಿದಂತೆ ವಿವಿಧ ಹಿಂದೂಪರ ಹಾಗೂ ಸಾಮಾಜಿಕ ಸಂಘಟನೆಗಳ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.




