ಚಿಕ್ಕಮಗಳೂರು: ನಗರದ ನರಿಗುಡ್ಡನಹಳ್ಳಿ ಸರ್ಕಲ್ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸಿಸಿ ಟಿವಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ ದೃಶ್ಯ ಸೆರೆಯಾಗಿದೆ. ಹೊಸ ಬುಲೆಟ್ ಬೈಕ್ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿ ಚರಣ್ ರಸ್ತೆ ತಿರುವಿನಲ್ಲಿ ಎದುರುಗಡೆಯಿಂದ ಬಂದ ಮತ್ತೊಂದು ಬೈಕ್ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತದ ವೇಳೆ ಚರಣ್ ಹೆಲ್ಮೆಟ್ ಧರಿಸಿರಲಿಲ್ಲ ಎನ್ನಲಾಗಿದ್ದು, ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಭೀಕರ ಡಿಕ್ಕಿಯ ರಭಸಕ್ಕೆ ಹೊಸ ಬುಲೆಟ್ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅಪಘಾತದ ದೃಶ್ಯ ಸಮೀಪದ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಚಿಕ್ಕಮಗಳೂರು ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಈ ಘಟನೆ ಹಿನ್ನೆಲೆಯಲ್ಲಿ ಎಲ್ಲ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಸಂಚಾರ ನಿಯಮಗಳನ್ನು ಪಾಲಿಸುವ ಮೂಲಕ ಸುರಕ್ಷಿತವಾಗಿ ವಾಹನ ಚಲಾಯಿಸುವಂತೆ ಟ್ರಾಫಿಕ್ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
