
ಧಾರವಾಡ: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಮಹತ್ವದ ಹಿನ್ನಡೆ ನೀಡಿದೆ. ವಿನಯ್ ಕುಲಕರ್ಣಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದ್ದು, ಎರಡು ವಾರಗಳೊಳಗೆ ಸಂಬಂಧಪಟ್ಟ ನ್ಯಾಯಾಲಯದ ಮುಂದೆ ಶರಣಾಗುವಂತೆ ಮಹತ್ವದ ಸೂಚನೆ ನೀಡಿದೆ. ಸಿಬಿಐ ಹಾಗೂ ಮೃತ ಯೋಗೇಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಸಲ್ಲಿಸಿದ್ದ ಮೇಲ್ಮನವಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ದ್ವಿಸದಸ್ಯ ಪೀಠ ಈ ಆದೇಶ ಹೊರಡಿಸಿದೆ. ಹೈಕೋರ್ಟ್ ನೀಡಿದ್ದ ಜಾಮೀನು ಮತ್ತು ಶಿಕ್ಷೆ ಅಮಾನತು ಆದೇಶವನ್ನು ರದ್ದುಗೊಳಿಸಿರುವ ಸುಪ್ರೀಂಕೋರ್ಟ್, ವಿನಯ್ ಕುಲಕರ್ಣಿ ಅವರ ಜಾಮೀನು ಬಾಂಡ್ಗಳನ್ನೂ ರದ್ದುಗೊಳಿಸಿದೆ. 2016ರ ಜೂನ್ 15ರಂದು ಧಾರವಾಡದ ಸಪ್ತಾಪುರದಲ್ಲಿರುವ ಜಿಮ್ನಲ್ಲಿ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಅವರನ್ನು ದುಷ್ಕರ್ಮಿಗಳ ತಂಡ ಹತ್ಯೆ ಮಾಡಿತ್ತು. ಆರಂಭದಲ್ಲಿ ಸ್ಥಳೀಯ ಪೊಲೀಸರು ತನಿಖೆ ನಡೆಸಿದ್ದ ಪ್ರಕರಣವನ್ನು ಬಳಿಕ ಸಿಬಿಐಗೆ ವಹಿಸಲಾಗಿತ್ತು. ತನಿಖೆಯ ವೇಳೆ ರಾಜಕೀಯ ದ್ವೇಷ ಹಾಗೂ ಕೊಲೆ ಸಂಚಿನ ಆರೋಪಗಳು ಕೇಳಿಬಂದಿದ್ದವು. ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ವಿನಯ್ ಕುಲಕರ್ಣಿ ಸೇರಿದಂತೆ ಆರೋಪಿಗಳನ್ನು 2026ರ ಏಪ್ರಿಲ್ನಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದೋಷಿಗಳೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಜುಲೈ 31ರಂದು ಶಿಕ್ಷೆಗೆ ತಾತ್ಕಾಲಿಕ ತಡೆ ನೀಡಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಹಾಗೂ ಯೋಗೇಶ್ ಗೌಡ ಅವರ ಸಹೋದರ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಅಕ್ಟೋಬರ್ 27ರಂದು ಎರಡೂ ಕಡೆಯ ವಾದ ಆಲಿಸಿದ್ದ ಸುಪ್ರೀಂಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ಜಾಮೀನು ರದ್ದುಗೊಳಿಸಿ ಎರಡು ವಾರಗಳಲ್ಲಿ ಶರಣಾಗುವಂತೆ ಆದೇಶಿಸಿರುವುದರಿಂದ ವಿನಯ್ ಕುಲಕರ್ಣಿ ಮತ್ತೆ ಜೈಲು ಸೇರಬೇಕಾದ ಪರಿಸ್ಥಿತಿ ಎದುರಾಗಿದೆ. ಮತ್ತೊಂದೆಡೆ, ಎರಡು ವರ್ಷಕ್ಕಿಂತ ಹೆಚ್ಚಿನ ಶಿಕ್ಷೆ ವಿಧಿಸಿರುವ ಹಿನ್ನೆಲೆಯಲ್ಲಿ ಅವರ ಶಾಸಕ ಸ್ಥಾನವೂ ಅನರ್ಹತೆಯ ವ್ಯಾಪ್ತಿಗೆ ಬಂದಿದೆ. ಸದ್ಯ ಕರ್ನಾಟಕ ಹೈಕೋರ್ಟ್ನಲ್ಲಿ ಅವರ ಶಿಕ್ಷೆಯ ವಿರುದ್ಧದ ಮೇಲ್ಮನವಿ ವಿಚಾರಣೆ ಬಾಕಿಯಿದ್ದು, ತುರ್ತು ವಿಚಾರಣೆಗೆ ಮನವಿ ಸಲ್ಲಿಸುವ ಅವಕಾಶವಿದೆ. ಹೈಕೋರ್ಟ್ನಲ್ಲಿ ವಿಚಾರಣೆ ನಡೆದು ಖುಲಾಸೆಗೊಂಡರೆ ಅವರಿಗೆ ಕಾನೂನು ಪರಿಹಾರ ದೊರೆಯಬಹುದು. ಇಲ್ಲವಾದಲ್ಲಿ ಜೀವಾವಧಿ ಶಿಕ್ಷೆಯ ಆದೇಶ ಮುಂದುವರಿಯುವ ಸಾಧ್ಯತೆಯಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯ ಹಾಗೂ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಹತ್ವದ ತಿರುವು ಪಡೆದುಕೊಂಡಿದೆ.




