
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ಉದ್ದೇಶದಿಂದ ಶಾಲಾ ಶಿಕ್ಷಣ ಇಲಾಖೆ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದೆ. ರಾಜ್ಯಾದ್ಯಂತ 15,000 ಸರ್ಕಾರಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ನಡೆಸಲಾಗುತ್ತಿದ್ದು, ಆಗಸ್ಟ್ 18ರಿಂದ ಆನ್ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ರಾಜ್ಯದ ಹಲವು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇರುವ ಹಿನ್ನೆಲೆಯಲ್ಲಿ ಹೊಸ ನೇಮಕಾತಿಗೆ ಒತ್ತಡ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಶಾಲಾ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ. ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದ ಮಾಹಿತಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ. ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಹಾಗೂ ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದಂತೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.




