
ನವದೆಹಲಿ: ಜೂನ್ 21ರಂದು ನಡೆಯಲಿರುವ ನೀಟ್-ಯುಜಿ 2026 ಮರುಪರೀಕ್ಷೆಯ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಭಾರತದಲ್ಲಿ ಟೆಲಿಗ್ರಾಮ್ ಆ್ಯಪ್ ಅನ್ನು ಜೂನ್ 22ರವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಟೆಲಿಗ್ರಾಮ್ ಸಂಸ್ಥೆ ದೆಹಲಿ ಹೈಕೋರ್ಟ್ ಮೊರೆ ಹೋಗಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರ ತನಿಖಾ ದಳ (CBI) ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಸಲ್ಲಿಸಿರುವ ಮಾಹಿತಿಯ ಪ್ರಕಾರ, ಈ ಹಿಂದೆ ಪ್ರಶ್ನೆಪತ್ರಿಕೆಗಳನ್ನು ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಚಾನೆಲ್ಗಳ ಮೂಲಕ ಪಿಡಿಎಫ್ ರೂಪದಲ್ಲಿ ಹಂಚಿಕೊಳ್ಳಲಾಗಿತ್ತು ಎಂಬ ಆರೋಪಗಳು ಕೇಳಿಬಂದಿದ್ದವು. ಇದೇ ಹಿನ್ನೆಲೆಯಲ್ಲಿ ಮರುಪರೀಕ್ಷೆಯ ಸಮಯದಲ್ಲಿ ಯಾವುದೇ ಭದ್ರತಾ ಲೋಪ, ಸುಳ್ಳು ವದಂತಿ ಅಥವಾ ಪರೀಕ್ಷಾ ಅಕ್ರಮಗಳು ನಡೆಯದಂತೆ ತಡೆಯಲು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69A ಅಡಿಯಲ್ಲಿ ಅತ್ಯಲ್ಪ ಅವಧಿಗೆ ಟೆಲಿಗ್ರಾಮ್ ನಿರ್ಬಂಧಿಸಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಇತ್ತೀಚಿನ ವಾರಗಳಲ್ಲಿ ‘Paper Leaked NEET’, ‘Re-NEET 2026’, ‘Private Mafia’ ಹಾಗೂ ‘Re-NEET Mafia’ ಹೆಸರಿನ ಹಲವು ಚಾನೆಲ್ಗಳು ಸಕ್ರಿಯವಾಗಿದ್ದವು ಎಂದು ಶಿಕ್ಷಣ ಸಚಿವಾಲಯ ಮತ್ತು ಎನ್ಟಿಎ ನ್ಯಾಯಾಲಯಕ್ಕೆ ಮಾಹಿತಿ ನೀಡಿವೆ. ಲಕ್ಷಾಂತರ ವಿದ್ಯಾರ್ಥಿಗಳ ಹಿತಾಸಕ್ತಿ ಹಾಗೂ ಪರೀಕ್ಷೆಯ ಪಾರದರ್ಶಕತೆ ಕಾಪಾಡಲು ಈ ಕ್ರಮ ಅನಿವಾರ್ಯವಾಗಿತ್ತು ಎಂದು ಎನ್ಟಿಎ ಹೇಳಿದ್ದು, ಮತ್ತೊಂದೆಡೆ ಟೆಲಿಗ್ರಾಮ್ ಸಂಸ್ಥೆ ನಿರ್ಬಂಧ ತೆರವುಗೊಳಿಸುವಂತೆ ಕೋರಿ ನ್ಯಾಯಾಲಯದ ಮೊರೆ ಹೋಗಿದೆ. ನ್ಯಾಯಮೂರ್ತಿ ತೇಜಸ್ ಕರಿಯಾ ಅವರ ಪೀಠ ಇಂದು ಈ ಅರ್ಜಿಯ ತುರ್ತು ವಿಚಾರಣೆ ನಡೆಸಲಿದ್ದು, ಹೈಕೋರ್ಟ್ನ ತೀರ್ಪಿನತ್ತ ಎಲ್ಲರ ಗಮನ ನೆಟ್ಟಿದೆ.




