
ಚಿಕ್ಕಮಗಳೂರು: ಜಿಲ್ಲೆಯಿಂದ ಒಟ್ಟು 21 ಮಂದಿ ಭಕ್ತರು ಬೊಲೆರೊ ವಾಹನದಲ್ಲಿ ಮಂತ್ರಾಲಯಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವಕುಂಟ ಗ್ರಾಮದ ಬಳಿ ಗುರುವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಚಿಕ್ಕಮಗಳೂರು ಮೂಲದ ಕುಮಾರ್ (50), ದೀಪಿಕಾ, ವೀಣಾ (42), ಸುನೀಲ್ (40), ಪುಟ್ಟಮ್ಮ (55), ಮೀನಾಕ್ಷಿ, ಯಶೋಧಾ (60) ಹಾಗೂ ಬಾಲಕಿ ಬೆಳ್ಳಿ (5) ಎಂದು ಗುರುತಿಸಲಾಗಿದೆ. ರಾಯರ ದರ್ಶನಕ್ಕಾಗಿ ತೆರಳುತ್ತಿದ್ದ ಭಕ್ತರ ಬೊಲೆರೊ ವಾಹನಕ್ಕೆ ಎದುರುಗಡೆಯಿಂದ ಬಂದ ಸಿಮೆಂಟ್ ಮತ್ತು ಜಲ್ಲಿಕಲ್ಲು ತುಂಬಿದ್ದ ಟ್ಯಾಂಕರ್ ಜೋರಾಗಿ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಉಳಿದ 13 ಮಂದಿಯನ್ನು ತಕ್ಷಣವೇ ಎಮಿಗನೂರು ಮತ್ತು ಕರ್ನೂಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಹಿನ್ನೆಲೆಯಲ್ಲಿ ಮಂತ್ರಾಲಯ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಟ್ಯಾಂಕರ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಈ ದುರ್ಘಟನೆಯಿಂದ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಮಂತ್ರಾಲಯ ಮಾರ್ಗದಲ್ಲಿ ಕೆಲಕಾಲ ಸಂಚಾರ ವ್ಯತ್ಯಯವೂ ಉಂಟಾಯಿತು.



