
ಚಿಕ್ಕಮಗಳೂರು: ಕಾಫಿ ಎಸ್ಟೇಟ್ನಲ್ಲಿ ಕೆಲಸ ಮಾಡುತ್ತಿದ್ದ ಹೊರಜಿಲ್ಲೆಯ ವಲಸೆ ಕಾರ್ಮಿಕರ ಮೇಲೆ ಮಾಲೀಕನಿಂದ ದೌರ್ಜನ್ಯ ನಡೆದಿರುವ ಗಂಭೀರ ಆರೋಪ ಕೇಳಿಬಂದಿದೆ. ಕಾರ್ಮಿಕರ ಮೇಲೆ ಹಲ್ಲೆ ನಡೆಸುವುದರ ಜೊತೆಗೆ ಬಂದೂಕು ತೋರಿಸಿ ಜೀವ ಬೆದರಿಕೆ ಹಾಕಿರುವ ಆರೋಪವೂ ವ್ಯಕ್ತವಾಗಿದ್ದು, ಹಲ್ಲೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಿಕ್ಕಮಗಳೂರು ತಾಲೂಕಿನ ಬಸಗೂಡು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುತ್ತದೆ. ಕಾಫಿ ಎಸ್ಟೇಟ್ ಮಾಲೀಕ ಭರತ್ ಎಂಬುವವರ ವಿರುದ್ಧ ಕಾರ್ಮಿಕರು ಹಾಗೂ ಮಹಿಳೆಯರನ್ನು ಜೀತದಾಳುಗಳಂತೆ ನಡೆಸಿಕೊಂಡು ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿರುವ ಆರೋಪ ಕೇಳಿಬಂದಿದೆ. ಮಹಿಳೆಯರು ಹಾಗೂ ಮಕ್ಕಳೂ ಸೇರಿದಂತೆ ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಲಾಗಿದೆ ಎನ್ನಲಾಗಿದ್ದು, ಮಹಿಳೆಯೊಬ್ಬರ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿರುವ ದೃಶ್ಯವೂ ವೈರಲ್ ಆಗಿರುವ ವಿಡಿಯೋದಲ್ಲಿದೆ. ಅಲ್ಲದೆ, ಬಂದೂಕು ಹಿಡಿದು ಕಾರ್ಮಿಕರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪವೂ ಕೇಳಿಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಹಾಗೂ ಕಾರ್ಮಿಕ ಇಲಾಖೆಯ ವಿರುದ್ಧ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದು, ಜಿಲ್ಲಾಡಳಿತ ತಕ್ಷಣ ಮಧ್ಯಪ್ರವೇಶಿಸಿ ಸಂತ್ರಸ್ತ ಕಾರ್ಮಿಕರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಆರೋಪಿಯ ವಿರುದ್ಧ ಕೂಡಲೇ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ.




