
ಚಿಕ್ಕಮಗಳೂರು: ಅಜ್ಜಂಪುರ ಪಟ್ಟಣ ಪಂಚಾಯಿತಿಯಲ್ಲಿ ಇದೀಗ ಅಧಿಕಾರ ದುರುಪಯೋಗದ ಆರೋಪ ಕೇಳಿಬಂದಿದೆ. ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆಯಾಗಿರುವ ಶೋಭಾ ಅವರ ಪತಿ ಸಂತೋಷ್, ಪಂಚಾಯಿತಿ ಅಧಿಕಾರಿಗಳ ಸಭೆ ನಡೆಸಿ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಉಪಾಧ್ಯಕ್ಷೆ ಶೋಭಾ ಅವರನ್ನು ಪಕ್ಕದಲ್ಲಿ ಕೂರಿಸಿಕೊಂಡು ಪತಿ ಸಂತೋಷ್ ಅಧಿಕಾರಿಗಳ ಸಭೆ ನಡೆಸಿರುವುದು ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಜನಪ್ರತಿನಿಧಿಯಾಗಿ ಆಯ್ಕೆಯಾಗಿರುವ ಪತ್ನಿಯ ಅಧಿಕಾರವನ್ನು ಪತಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ಬೆಳವಣಿಗೆಯನ್ನು ಖಂಡಿಸಿರುವ ಪಟ್ಟಣ ಪಂಚಾಯಿತಿ ಕಾಂಗ್ರೆಸ್ ಸದಸ್ಯರು, ಅಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡಲು ಸಂತೋಷ್ ಅವರಿಗೆ ಯಾವ ಅಧಿಕಾರವಿದೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ಈ ಸಂಬಂಧ ಅಜ್ಜಂಪುರ ತಹಶೀಲ್ದಾರ್ ಅವರಿಗೆ ದೂರು ಸಲ್ಲಿಸಿ, ಘಟನೆ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಒಟ್ಟಿನಲ್ಲಿ, ಅಜ್ಜಂಪುರ ಪಟ್ಟಣ ಪಂಚಾಯಿತಿಯಲ್ಲಿ ಉಪಾಧ್ಯಕ್ಷೆಯ ಅಧಿಕಾರವನ್ನು ಪತಿಯೇ ಚಲಾಯಿಸುತ್ತಿದ್ದಾರೆಯೇ ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ.





