
ಬೆಂಗಳೂರು: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸುವ ಮೂಲಕ ತಮ್ಮ ಬಹುಕಾಲದ ಕನಸನ್ನು ನನಸಾಗಿಸಿಕೊಂಡಿದ್ದಾರೆ. ಬೆಂಗಳೂರಿನ ಲೋಕಭವನದ ಗ್ಲಾಸ್ ಹೌಸ್ನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದ್ದು, ವೀರ ಗಂಗಾಧರ ಅಜ್ಜಯ್ಯ ಅವರ ಹೆಸರಿನಲ್ಲಿ ಡಿಕೆ ಶಿವಕುಮಾರ್ ಸಂವಿಧಾನ ಪುಸ್ತಕ ಹಿಡಿದು ಪ್ರಮಾಣವಚನ ಸ್ವೀಕರಿಸಿದರು. ರೇಷ್ಮೆ ಪಂಚೆ, ಜುಬ್ಬ ಹಾಗೂ ಶಲ್ಯ ಧರಿಸಿ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡ ಡಿಕೆಶಿ ಅವರ ಪದಗ್ರಹಣಕ್ಕೆ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲಾ, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ನ ಹಲವು ಹಿರಿಯ ನಾಯಕರು, ವಿವಿಧ ಮಠಾಧೀಶರು, ಮೌಲ್ವಿಗಳು, ಚರ್ಚ್ ಮುಖ್ಯಸ್ಥರು, ಸಿನಿತಾರೆಯರು ಹಾಗೂ ಗಣ್ಯರು ಸಾಕ್ಷಿಯಾದರು. ಪ್ರಮಾಣವಚನಕ್ಕೂ ಮುನ್ನ ಸದಾಶಿವನಗರದ ನಿವಾಸದಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿತ್ತು. ಡಿಕೆ ಶಿವಕುಮಾರ್ ಅವರೊಂದಿಗೆ 14 ಸಚಿವರು ಕೂಡ ಪ್ರಮಾಣವಚನ ಸ್ವೀಕರಿಸಿದ್ದು, ಡಾ. ಜಿ. ಪರಮೇಶ್ವರ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ. ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ. ಖಾದರ್, ಈಶ್ವರ್ ಖಂಡ್ರೆ, ಡಾ. ಯತೀಂದ್ರ ಸಿದ್ದರಾಮಯ್ಯ, ಬೈರತಿ ಸುರೇಶ್ ಹಾಗೂ ಶರಣಪ್ರಕಾಶ್ ಪಾಟೀಲ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಸಾವಿರಾರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಸಿದ್ದರಾಮಯ್ಯ ಬಳಿಕ ರಾಜ್ಯದ ಚುಕ್ಕಾಣಿ ಹಿಡಿದಿರುವ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಖಾತೆ ಹಂಚಿಕೆ ಮತ್ತು ಮುಂದಿನ ಆಡಳಿತದ ರೂಪುರೇಷೆಗಳ ಬಗ್ಗೆ ರಾಜ್ಯದಾದ್ಯಂತ ಭಾರೀ ಕುತೂಹಲ ಮೂಡಿದೆ. ಈ ಮೂಲಕ ಮೂರು ವರ್ಷಗಳ ರಾಜಕೀಯ ನಿರೀಕ್ಷೆ ಹಾಗೂ ಹೋರಾಟಕ್ಕೆ ತೆರೆ ಬಿದ್ದು, ರಾಜ್ಯದಲ್ಲಿ ಡಿಕೆ ಶಿವಕುಮಾರ್ ಆಡಳಿತ ಅಧಿಕೃತವಾಗಿ ಆರಂಭವಾಗಿದೆ.




