
ಬೆಂಗಳೂರು: ಜೂನ್ 21ರಂದು ನಡೆಯಲಿರುವ ನೀಟ್ ಯುಜಿ (NEET UG) ಮರುಪರೀಕ್ಷೆಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಭರದ ಸಿದ್ಧತೆ ನಡೆಸಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳ ಹಿನ್ನೆಲೆ ಈ ಬಾರಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಜಾರಿಗೆ ತಂದಿದೆ. ದೇಶದ 552 ನಗರಗಳಲ್ಲಿ ಮಧ್ಯಾಹ್ನ 2.30ರಿಂದ ಸಂಜೆ 5.15ರವರೆಗೆ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಹೆಚ್ಚುವರಿಯಾಗಿ 15 ನಿಮಿಷಗಳ ಕಾಲಾವಕಾಶ ನೀಡಲಾಗಿದೆ. ಪ್ರಶ್ನೆಪತ್ರಿಕೆಗಳನ್ನು ಸುರಕ್ಷಿತವಾಗಿ ತಲುಪಿಸಲು ಸೇನಾ ಹೆಲಿಕಾಪ್ಟರ್ಗಳು ಮತ್ತು ವಿಮಾನಗಳನ್ನು ಬಳಸಲಾಗಿದ್ದು, ಸಿಆರ್ಪಿಎಫ್ ಹಾಗೂ ಸಿಐಎಸ್ಎಫ್ ಭದ್ರತೆಯಲ್ಲಿ ಸಾಗಣೆ ಮತ್ತು ಸಂಗ್ರಹಣೆ ಕಾರ್ಯ ನಡೆಯುತ್ತಿದೆ. ನಕಲಿ ಅಭ್ಯರ್ಥಿಗಳನ್ನು ತಡೆಯಲು ಪರೀಕ್ಷಾ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ ಅಳವಡಿಸಲಾಗಿದ್ದು, ಪ್ರಶ್ನೆಪತ್ರಿಕೆ ಸಿದ್ಧತೆಯಲ್ಲಿ ತೊಡಗಿರುವ ಪ್ರಾಧ್ಯಾಪಕರಿಗೆ ಪರೀಕ್ಷೆ ಪೂರ್ಣಗೊಳ್ಳುವವರೆಗೆ ಮೊಬೈಲ್ ಬಳಕೆಗೆ ನಿರ್ಬಂಧ ಹೇರಲಾಗಿದೆ. ಪರೀಕ್ಷೆಯ ಪಾರದರ್ಶಕತೆ ಹಾಗೂ ವಿಶ್ವಾಸಾರ್ಹತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ.



