
ವಿಜಯಪುರ: ಜಿಲ್ಲೆಯ ಚಡಚಣ ತಾಲೂಕಿನ ಲೋಣಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟಿಪ್ಪರ್ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಟಿಪ್ಪರ್ ವಾಹನದ ಟೈರ್ ಬ್ಲಾಸ್ಟ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಬಸ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ದುರ್ಘಟನೆಯಲ್ಲಿ ಟಿಪ್ಪರ್ ಚಾಲಕ ಅಶೋಕ್ ಉಟಗಿ, ಅವರ ಪತ್ನಿ ರಾಧಾಬಾಯಿ ಹಾಗೂ ಕೆಎಸ್ಆರ್ಟಿಸಿ ಬಸ್ ಚಾಲಕ ಹನುಮಂತ ಚಲವಾದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. KA-28-AA-6792 ನೋಂದಣಿಯ ಟಿಪ್ಪರ್ ಚಡಚಣದತ್ತ ತೆರಳುತ್ತಿದ್ದರೆ, KA-28-F-2468 ಸಂಖ್ಯೆಯ ಸರ್ಕಾರಿ ಬಸ್ ಚಡಚಣದಿಂದ ವಿಜಯಪುರದತ್ತ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬಸ್ನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಘಟನೆ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿಸಿದ್ದಾರೆ.



