ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಾಳೇಖಾನ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಪ್ರವಾಸಿ ಕಾರೊಂದು ರಸ್ತೆ ಬದಿಯ ಕಂದಕಕ್ಕೆ ಪಲ್ಟಿಯಾಗಿ ಬಿದ್ದ ಘಟನೆ ನಡೆದಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಿಂದ ಹೊರನಾಡಿಗೆ ತೆರಳುತ್ತಿದ್ದ ಈ ಕಾರು ಎರಡು ಪಲ್ಟಿಯಾಗಿದ್ದು, ಭಾರೀ ಅನಾಹುತ ಕೂದಲೆಳೆ ಅಂತರದಲ್ಲಿ ತಪ್ಪಿದೆ. ಕಾರಿನಲ್ಲಿದ್ದ ಪ್ರವಾಸಿಗರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು, ಗಾಯಾಳುಗಳನ್ನು ಕಳಸ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಮಾಹಿತಿ ಪಡೆದ ಕಳಸ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕ್ರೇನ್ ಸಹಾಯದಿಂದ ಕಂದಕಕ್ಕೆ ಬಿದ್ದ ಕಾರನ್ನು ಮೇಲಕ್ಕೆ ಎತ್ತಲಾಗಿದೆ.
