
ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ನೌಕರರು ವೇತನ ಪರಿಷ್ಕರಣೆ, ಹಿಂಬಾಕಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆಬ್ರವರಿ 19ರಂದು ‘ಬೆಂಗಳೂರು ಚಲೋ’ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಹೆಚ್ಚಿನ ಸಂಖ್ಯೆಯಲ್ಲಿ ನೌಕರರು ಬೆಂಗಳೂರಿಗೆ ಜಮಾಯಿಸುವ ನಿರೀಕ್ಷೆಯಿದ್ದು, ಕರ್ತವ್ಯಕ್ಕೆ ಗೈರಾದಲ್ಲಿ ವೇತನ ಕಡಿತ ಸೇರಿದಂತೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಂಡಿ ಅಕ್ರಂ ಪಾಷಾ ಎಚ್ಚರಿಕೆ ನೀಡಿದ್ದಾರೆ. ಅನಧಿಕೃತ ಗೈರುಹಾಜರಿಗೆ ಹೈಕೋರ್ಟ್ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗುವುದು ಎಂದೂ ಸ್ಪಷ್ಟಪಡಿಸಲಾಗಿದೆ. ತುರ್ತು ಪರಿಸ್ಥಿತಿ ಹೊರತುಪಡಿಸಿ ರಜೆ ನೀಡಬಾರದೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಅಗತ್ಯವಿದ್ದರೆ ವಾರದ ರಜೆಯನ್ನೂ ರದ್ದುಪಡಿಸಲು ಆದೇಶಿಸಲಾಗಿದೆ. ಈ ನಡುವೆ ಸಾರಿಗೆ ಮುಖಂಡರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ಹಂತದಲ್ಲಿ ಮುಷ್ಕರ ನಡೆಸುವುದಾಗಿ ಎಚ್ಚರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ.




