ಕಾರ್ಕಳ: ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ, ಭಾರತ ರತ್ನ ದಿವಂಗತ ಇಂದಿರಾ ಗಾಂಧಿಯವರ ಜಯಂತಿಯನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ನಿರ್ದೇಶಕ ಹಾಗೂ ಕಾಂಗ್ರೆಸ್ ನಾಯಕ ಶೇಖರ್ ಮಡಿವಾಳ್, ದೇಶದ ಪ್ರಪ್ರಥಮ ಮಹಿಳಾ ಪ್ರಧಾನಿಯಾಗಿ ಗರೀಬಿ ಹಠಾವೊ, ಬ್ಯಾಂಕ್ ರಾಷ್ಟ್ರೀಕರಣ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ದೇಶದ ಅಭಿವೃದ್ಧಿಗೆ ಇಂದಿರಾ ಗಾಂಧಿಯವರು ಮಹತ್ವದ ಕೊಡುಗೆ ನೀಡಿದ್ದಾರೆ. ಬಡವರು ಹಾಗೂ ಸಾಮಾನ್ಯ ಜನರ ಪರವಾದ ಅವರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿದ್ದು, ಅಂತಹ ಮಹಾನ್ ನಾಯಕಿಯನ್ನು ಸ್ಮರಿಸುವುದು ನಮ್ಮ ಕರ್ತವ್ಯ ಎಂದರು. ಕಾರ್ಯಕ್ರಮಕ್ಕೆ ನಿವೃತ್ತ ಉಪನ್ಯಾಸಕ ಹಾಗೂ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ದೇವದಾಸ್ ಆರ್. ಅವರು ಇಂದಿರಾ ಗಾಂಧಿಯವರ ಭಾವಚಿತ್ರಕ್ಕೆ ದೀಪ ಬೆಳಗಿ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಮಾತನಾಡಿ, ಕೋಟ್ಯಂತರ ಜನರಿಗೆ ಭೂಮಿಯ ಹಕ್ಕು ದೊರಕಿಸಿಕೊಡುವಲ್ಲಿ ಇಂದಿರಾ ಗಾಂಧಿಯವರ ಕೊಡುಗೆ ಮಹತ್ವದ್ದಾಗಿದೆ. ಬಡವರ ಪರವಾಗಿ ಹಲವು ಕ್ರಾಂತಿಕಾರಿ ನಿರ್ಧಾರಗಳನ್ನು ಕೈಗೊಂಡ ಅವರ ಸೇವೆ ಸ್ಮರಣೀಯ ಎಂದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ನಕ್ರೆ ಮಾತನಾಡಿ, ಮಹಿಳಾ ಸಬಲೀಕರಣಕ್ಕೆ ಇಂದಿರಾ ಗಾಂಧಿಯವರ ಆಡಳಿತ ಹೊಸ ದಿಕ್ಕು ನೀಡಿತು. 20 ಅಂಶಗಳ ಕಾರ್ಯಕ್ರಮದ ಮೂಲಕ ಬಡವರಿಗೆ ಹಕ್ಕು, ಉದ್ಯೋಗ ಹಾಗೂ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಗಳನ್ನಿಟ್ಟಿದ್ದರು. ಅವರ ಹತ್ಯೆ ಪ್ರಜಾಪ್ರಭುತ್ವಕ್ಕೆ ದೊಡ್ಡ ಆಘಾತವಾಗಿತ್ತು ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಕೆಡಿಪಿ ನಾಮನಿರ್ದೇಶನ ಸದಸ್ಯ ಎಂ.ಪಿ. ಮೊಯಿದ್ದೀನ್ ಇನ್ನಾ, ಭೂ ನ್ಯಾಯ ಮಂಡಳಿ ಸದಸ್ಯ ಸುನೀಲ್ ಭಂಡಾರಿ, ಪುರಸಭೆಯ ಮಾಜಿ ಅಧ್ಯಕ್ಷೆ ರೆಹಮತ್, ಕೆಡಿಪಿ ಸದಸ್ಯ ರುಕ್ಮಯ ಶೆಟ್ಟಿಗಾರ್, ಗ್ಯಾರಂಟಿ ಸಮಿತಿ ಸದಸ್ಯರಾದ ವಿಶ್ವನಾಥ ಭಂಡಾರಿ, ಸಂತೋಷ್ ದೇವಾಡಿಗ, ಹೇಮಂತ್ ಆಚಾರ್ಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾನು ಭಾಸ್ಕರ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ನಗರ ಮಹಿಳಾ ಅಧ್ಯಕ್ಷೆ ರೀನಾ ಜೂಲಿಯೆಟ್ ಸ್ವಾಗತಿಸಿದರು. ಬ್ಲಾಕ್ ಕಾರ್ಯದರ್ಶಿ ಜೋಕಿಂ ಪಿಂಟೋ ವಂದಿಸಿದರು.
