
ಚಿಕ್ಕಮಗಳೂರು: ನಗರದಲ್ಲಿ ಬುಧವಾರ ಈದ್ ಮಿಲಾದ್ ಮೆರವಣಿಗೆ ನಡೆಯಲಿದ್ದು, ಇದರ ಹಿನ್ನೆಲೆ ಟಿಪ್ಪು ನಗರದಲ್ಲಿ ಸುಮಾರು 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ಅಳವಡಿಸಲಾಗಿದೆ. ಈ ಕಟೌಟ್ಗೆ ಸಂಬಂಧಿಸಿದ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದ್ದು, ಅದರಲ್ಲಿ ದೇಶವಿರೋಧಿ ಹಾಡು ಬಳಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪಾಕಿಸ್ತಾನದ ಮುಜಾಹಿದ್ಗೆ ಸಂಬಂಧಿಸಿದ ಹಾಡು ಬಳಸಲಾಗಿದೆ ಎಂದು ಆರೋಪಿಸಲಾಗಿರುವ ಈ ವಿಡಿಯೋ ಇದೀಗ ಇನ್ಸ್ಟಾಗ್ರಾಂನಲ್ಲಿ ವೈರಲ್ ಆಗಿದೆ. ‘ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್’ ಹೆಸರಿನ ಇನ್ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೋ ವೈರಲ್ ಆಗಿದೆ ಎನ್ನಲಾಗಿದ್ದು, ಇದಕ್ಕೆ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಈ ಘಟನೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವರದಿ: ಸಂತೋಷ್ ಅತ್ತಿಗೆರೆ





