
ಬೈಲೂರು: ಆಧುನಿಕ ಜೀವನಶೈಲಿ ಹಾಗೂ ಬದಲಾಗುತ್ತಿರುವ ಆಹಾರ ಪದ್ಧತಿಯಿಂದ ಹದಿಹರೆಯದ ಮಕ್ಕಳಲ್ಲಿ ಉಂಟಾಗುತ್ತಿರುವ ಆರೋಗ್ಯ ಸಮಸ್ಯೆಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಬಿಜೆಪಿ ಕಾರ್ಕಳ ಮಹಿಳಾ ಮೋರ್ಚಾ ವತಿಯಿಂದ ಜೂನ್ 23ರಂದು ಬೈಲೂರು ಪದವಿ ಪೂರ್ವ ಕಾಲೇಜಿನಲ್ಲಿ “ಆರೋಗ್ಯಪೂರ್ಣ ಆಹಾರ ಪದ್ಧತಿ” ಕುರಿತು ಕಾರ್ಯಾಗಾರವನ್ನು ಆಯೋಜಿಸಲಾಯಿತು. ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥನೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಸಮುದಾಯ ಕೇಂದ್ರದ ಆರೋಗ್ಯಾಧಿಕಾರಿ ತೇಜಸ್ವಿನಿ ಅವರು ಹಿಂದಿನ ಸಾಂಪ್ರದಾಯಿಕ ಆಹಾರ ಪದ್ಧತಿ ಹಾಗೂ ಇಂದಿನ ಆಹಾರ ವ್ಯವಸ್ಥೆಯ ನಡುವಿನ ವ್ಯತ್ಯಾಸ, ಸಮತೋಲಿತ ಆಹಾರದ ಅಗತ್ಯತೆ, ಪೌಷ್ಟಿಕಾಂಶಗಳ ಮಹತ್ವ ಹಾಗೂ ಆರೋಗ್ಯಕರ ಜೀವನಶೈಲಿಯ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು. ಇತ್ತೀಚಿನ ದಿನಗಳಲ್ಲಿ ಫಾಸ್ಟ್ಫುಡ್ ಹಾಗೂ ಸಂಸ್ಕರಿತ ಆಹಾರಗಳ ಬಳಕೆಯಿಂದ ಉಂಟಾಗುವ ಅನಾರೋಗ್ಯ ಸಮಸ್ಯೆಗಳ ಬಗ್ಗೆ ಎಚ್ಚರಿಕೆ ನೀಡಿದ ಅವರು, ಸ್ಥಳೀಯವಾಗಿ ದೊರೆಯುವ ಪೌಷ್ಟಿಕ ಆಹಾರಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಮಾತನಾಡಿ, ಅತಿಯಾದ ಎಣ್ಣೆ ಹಾಗೂ ಕೊಬ್ಬಿನಾಂಶಯುಕ್ತ ಆಹಾರಗಳ ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಅದರ ಬದಲಾಗಿ ಸೊಪ್ಪು, ತರಕಾರಿ, ಮೊಳಕೆಕಾಳುಗಳಂತಹ ಪೌಷ್ಟಿಕ ಆಹಾರಗಳನ್ನು ಮಿತವಾಗಿ ಬಳಸುವುದರಿಂದ ಆರೋಗ್ಯ ವೃದ್ಧಿಯಾಗುವುದರ ಜೊತೆಗೆ ಇಂಧನ ಉಳಿತಾಯವೂ ಸಾಧ್ಯವಾಗುತ್ತದೆ ಎಂದು ಹೇಳಿದರು. ಪ್ರಧಾನಿಯವರ ಆತ್ಮನಿರ್ಭರ ಪರಿಕಲ್ಪನೆಯಡಿಯಲ್ಲಿ ಸ್ಥಳೀಯ ಆಹಾರ ಪದಾರ್ಥಗಳ ಬಳಕೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸ್ವದೇಶಿ ಆಹಾರ ಪದ್ಧತಿಯನ್ನು ಅಳವಡಿಸಿಕೊಳ್ಳುವುದು ಆರೋಗ್ಯ ಹಾಗೂ ಆರ್ಥಿಕ ದೃಷ್ಟಿಯಿಂದಲೂ ಪ್ರಯೋಜನಕಾರಿ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಸೀತಾರಾಮ್ ಭಟ್ ಮಾತನಾಡಿ, ಕಾರ್ಯಾಗಾರದಲ್ಲಿ ಪಡೆದ ಮಾಹಿತಿಯನ್ನು ವಿದ್ಯಾರ್ಥಿಗಳು ತಮ್ಮ ಮನೆಗಳಲ್ಲಿ ಹಾಗೂ ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡು ಆರೋಗ್ಯಕರ ಜೀವನ ನಡೆಸಬೇಕು ಎಂದು ಕರೆ ನೀಡಿದರು. ಆರೋಗ್ಯದ ಮಹತ್ವವನ್ನು ವಿದ್ಯಾರ್ಥಿ ಜೀವನದಲ್ಲಿಯೇ ಅರಿತುಕೊಂಡರೆ ಭವಿಷ್ಯದಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ರವೀಂದ್ರ ಕುಮಾರ್ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿ, ಇಂತಹ ಜಾಗೃತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಉತ್ತಮ ಆರೋಗ್ಯ ಸಂಸ್ಕೃತಿಯನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ, ಕಾರ್ಕಳ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ವಿನಯ ಡಿ. ಬಂಗೇರ, ಜಿಲ್ಲಾ ಕಾರ್ಯದರ್ಶಿ ಶೋಭಾ ಭಾಸ್ಕರ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಉಷಾ ಜಯಪ್ರಕಾಶ್ ಹಾಗೂ ಲಕ್ಷ್ಮೀ ಮಂಜುನಾಥ್, ಕಾರ್ಯದರ್ಶಿ ಜ್ಯೋತಿ ರಮೇಶ್, ತಾಲೂಕು ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನುತಾ ಆಚಾರ್ಯ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
ಉಪನ್ಯಾಸಕ ರತ್ನಾಕರ ಪೂಜಾರಿ ಸ್ವಾಗತಿಸಿ, ವಿನಯ ಡಿ. ಬಂಗೇರ ವಂದಿಸಿದರು. ತಾಲೂಕು ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುಮಾ ರವಿಕಾಂತ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಾಗಾರ ನಡೆಸಿಕೊಟ್ಟ ಆರೋಗ್ಯಾಧಿಕಾರಿ ತೇಜಸ್ವಿನಿ ಅವರನ್ನು ಫಲ ಹಾಗೂ ಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ವಿದ್ಯಾರ್ಥಿನಿಯರು ಆಸಕ್ತಿಯಿಂದ ಭಾಗವಹಿಸಿದ ಈ ಕಾರ್ಯಾಗಾರ ಆರೋಗ್ಯಕರ ಆಹಾರ ಪದ್ಧತಿಯ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಯಿತು.




